ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ; ಸಿಎಂ ಸಿದ್ದರಾಮಯ್ಯ ಘೋಷಣೆ

cm siddaramaiah
Spread the love

ನ್ಯೂಸ್ ಆ್ಯರೋ: ಮಹಿಳೆಯರು, ಬಡವರು, ತಳ ಸಮುದಾಯಗಳ ಮೀಸಲಾತಿ ವಿರೋಧಿಯಾಗಿರುವ ಬಿಜೆಪಿ ಸರ್ಕಾರ 2028ರ ಬಳಿಕ ಅಧಿಕಾರದಲ್ಲಿ ಇರುವುದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿರಾ ಗಾಂಧಿ ಅವರ ಬದುಕು ಎಲ್ಲರಿಗೂ ಆದರ್ಶ. ದೇಶಕ್ಕಾಗಿ ಪ್ರಾಣ ಕೊಟ್ಟ ಅವರನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಬಡವರ ಏಳಿಗೆ ಆಗಬೇಕೆಂದರೆ ಶಿಕ್ಷಣ, ರಾಜಕೀಯ, ಆರ್ಥಿಕ ಶಕ್ತಿ, ಸಮಾನ ಅವಕಾಶಗಳನ್ನು ನೀಡಬೇಕು ಎಂದಿದ್ದರು. ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವ ಮೂಲಕ ಬಡವರಿಗೆ ಬಾಗಿಲು ತೆಗೆಸಿದರು ಎಂದರು.

ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದಾಗ ಅಧಿಕಾರ ವಿಕೇಂದ್ರೀಕರಣ ಮಾಡಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ತಂದು, ಮಹಿಳೆಯರ ಕೈಗೆ ಅಧಿಕಾರ ನೀಡಿದರು. ಬಿಜೆಪಿಯ ರಾಜ್ಯಸಭಾ ಸದಸ್ಯ ರಾಮಾ ಜೋಯಿಸ್ ಮೀಸಲಾತಿ ವಿರುದ್ಧವೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2028ರಲ್ಲಿ ಮಹಿಳಾ ಮೀಸಲಾತಿ ತರುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈಗಲೇ ತರಲು ಏನು ಸಮಸ್ಯೆ? ಏಕೆಂದರೆ, ಅವರಿಗೆ ಇಚ್ಛಾಶಕ್ತಿ ಇಲ್ಲ. ಹೀಗಾಗಿ, 2028ರ ಬಳಿಕ ನಾವೇ ಮೀಸಲಾತಿ ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಅಧಿಕಾರ ಕೇಂದ್ರೀಕರಣ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿದೆ. ಬಡವರು, ಸಾಮಾಜಿಕ ನ್ಯಾಯದ ವಿರೋಧಿಯಾಗಿರುವ ಬಿಜೆಪಿಯವರಿಗೆ ಪ್ರಜಾಪ್ರಭುತ್ವ, ಸಂವಿಧಾನದ ಬಗ್ಗೆ ಗೌರವವಿಲ್ಲ. ಆದರೆ, ಕಾಂಗ್ರೆಸ್ ಪಕ್ಷ ಎಂದಿಗೂ ಅಧಿಕಾರ ವಿಕೇಂದ್ರಿಕರಣದ ಪರವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಿದ್ಧಾಂತದ ಬಗ್ಗೆ ಸ್ಪಷ್ಟತೆ ಹೊಂದಬೇಕು ಎಂದು ಮುಖ್ಯಮಂತ್ರಿ ಹೇಳಿದರು.ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಾತನಾಡಿ, ಇಂದಿರಾ ಗಾಂಧಿ ಅವರು ಅಂದಿನ ಕಾಲದಲ್ಲೇ ಬಲಿಷ್ಠ ಅಮೆರಿಕಕ್ಕೆ ಸೆಡ್ಡು ಹೊಡೆಯುತ್ತಿದ್ದರು. ಅವರು ಧೈರ್ಯವಂತೆ ಕರುಣಾಮಯಿ, ಮಮತಾಮಯಿ ಹಾಗೂ ತ್ಯಾಗಮಯಿ ಎಂದರು.

Leave a Comment

Leave a Reply

Your email address will not be published. Required fields are marked *

error: Content is protected !!