ವಿಧಾನ ಪರಿಷತ್ ಉಪಚುನಾವಣೆ; ಭರ್ಜರಿ ಮತ ಪಡೆದು ಗೆಲುವಿನ ನಗೆ ಬೀರಿದ ಕಿಶೋರ್ ಕುಮಾರ್
ನ್ಯೂಸ್ ಆ್ಯರೋ:ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪಚುನಾವಣೆ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600ಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್ನ ರಾಜು ಪೂಜಾರಿ ಪರಾಭವಗೊಂಡಿದ್ದಾರೆ. ಈ ಮೂಲಕ ಬಿಜೆಪಿ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದೆ.
ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅ.21 ರಂದು ಚುನಾವಣೆ ನಡೆದಿತ್ತು.
ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿತ್ತು. ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಮತ ಎಣಿಕೆ ನಡೆಯಿತು. ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಯಿತು.
ಈ ಬಾರಿ ನಡೆದ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಬಿಜೆಪಿಯಿಂದ ಕಿಶೋರ್ ಬಿ.ಆರ್, ಕಾಂಗ್ರೆಸ್ನಿಂದ ರಾಜು ಪೂಜಾರಿ, ಎಸ್ಡಿಪಿಐನಿಂದ ಅನ್ವರ್ ಸಾದತ್.ಎಸ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಕಣದಲ್ಲಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿ ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 6,032 ಮತದಾರರಿದ್ದರು. ಇದರಲ್ಲಿ 5,906 ಮಂದಿ ಮತ ಚಲಾಯಿಸಿದ್ದರು. ಉಭಯ ಜಿಲ್ಲೆಗಳ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿದ್ದರು.
Leave a Comment