‘ಮಾರ್ಟಿನ್’ ಗೆ ಎದುರಾಯ್ತು ಸಂಕಷ್ಟ; ತಮ್ಮದೇ ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಿರ್ದೇಶಕ
ನ್ಯೂಸ್ ಆ್ಯರೋ: ಮಾರ್ಟೀನ್ ಸಿನೆಮಾ ಚಿತ್ರದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸಿನಿಮಾ ನಿರ್ಮಾಪಕರ ವಿರುದ್ಧ ನಿರ್ದೇಶಕರಾದ ಎಪಿ ಅರ್ಜುನ್ ಚಿತ್ರ ಬಿಡುಗಡೆ ಮಾಡದಂತೆ ನಿರ್ಬಂಧ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಹೌದು. . ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಪ್ರಾರಂಭವಾಗಿ ಸುಮಾರು ಐದಾರು ವರ್ಷವಾಗಿದೆ. ವರ್ಷಗಳ ಬಳಿಕ ಈಗ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಆಗಿದ್ದು, ಇನ್ನೇನು ಸುಸೂತ್ರವಾಗಿ ಸಿನಿಮಾ ಬಿಡುಗಡೆ ಆಗಲಿದೆ ಎಂದುಕೊಳ್ಳುತ್ತಿರುವಾಗಲೇ ಸಿನಿಮಾ ವಿವಾದಕ್ಕೆ ಸಿಲುಕಿದೆ. ಇದೀಗ ‘ಮಾರ್ಟಿನ್’ ಸಿನಿಮಾ ವಿವಾದ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಸಿನಿಮಾದ ನಿರ್ದೇಶಕ ಎಪಿ ಅರ್ಜುನ್ ಅವರೇ ಸಿನಿಮಾ ಕುರಿತಾಗಿ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.
‘ಮಾರ್ಟಿನ್’ ಸಿನಿಮಾದ ನಿರ್ಮಾಪಕ ಉದಯ್ ಮೆಹ್ತಾ ಹಾಗೂ ನಿರ್ದೇಶಕ ಎಪಿ ಅರ್ಜುನ್ ನಡುವೆ ಕಳೆದ ಒಂದೆರಡು ವರ್ಷಗಳಿಂದಲೂ ಕೋಲ್ಡ್ ವಾರ್ ಚಾಲ್ತಿಯಲ್ಲಿದೆ. ಸಿನಿಮಾದ ಬಜೆಟ್, ಹಣ ದುರ್ಬಳಕೆ ಆರೋಪವನ್ನು ನಿರ್ಮಾಪಕ ಉದಯ್ ಮೆಹ್ತಾ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಿನಿಮಾದ ವಿಎಫ್ಎಕ್ಸ್ ಮಾಡಲು ಒಪ್ಪಂದ ಮಾಡಿಕೊಂಡಿದ್ದ ಸಂಸ್ಥೆಯ ವಿರುದ್ಧ ವಂಚನೆ ಪ್ರಕರಣವನ್ನು ಉದಯ್ ಮೆಹ್ತಾ ಈಗಾಗಲೇ ದಾಖಲಿಸಿದ್ದಾರೆ. ಉದಯ್ ಮೆಹ್ತಾ ನೀಡಿದ್ದ ದೂರಿನಲ್ಲಿ ಎಪಿ ಅರ್ಜುನ್ ಹೆಸರು ಸಹ ಇತ್ತು.
ವಿವಾದದ ಬಳಿಕ ಇತ್ತೀಚೆಗೆ ನಡೆದ ಪ್ರಚಾರ ಕಾರ್ಯಕ್ರಮಗಳಲ್ಲಿ ಕಂಡು ಬಂದ ಸಿನಿಮಾ ಪೋಸ್ಟರ್ಗಳಲ್ಲಿ ಸಿನಿಮಾದ ನಿರ್ದೇಶಕ ಎಪಿ ಅರ್ಜುನ್ ಅವರ ಹೆಸರು ನಾಪತ್ತೆಯಾಗಿತ್ತು. ನಿರ್ದೇಶಕರ ಹೆಸರು ಬಿಟ್ಟು ಸಿನಿಮಾದ ಪ್ರಚಾರವನ್ನು ನಿರ್ಮಾಪಕ ಉದಯ್ ಮೆಹ್ತಾ ಮಾಡಿದ್ದರು. ಇದೀಗ ಕೋರ್ಟ್ ಮೆಟ್ಟಿಲೇರಿರುವ ಎಪಿ ಅರ್ಜುನ್, ‘ಸಿನಿಮಾದ ನಿರ್ದೇಶಕನಾಗಿದ್ದರೂ ಸಹ ನನ್ನ ಹೆಸರು ಕೈಬಿಟ್ಟು ಪ್ರಚಾರ ಮಾಡಲಾಗುತ್ತಿದೆ. ಸಿನಿಮಾದ ಒಪ್ಪಂದವನ್ನು ನಿರ್ಮಾಪಕರು ಪಾಲಿಸುತ್ತಿಲ್ಲ. ನನ್ನ ಹೆಸರು ಇಲ್ಲದೆ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬಾರದು’ ಎಂದು ಅರ್ಜುನ್, ಕೋರ್ಟ್ಗೆ ಮೊರೆ ಹೋಗಿದ್ದಾರೆ. ಹೀಗಾಗಿ ಚಿತ್ರ ಬಿಡುಗಡೆಗೆ ಸಂಕಷ್ಟ ಎದುರಾಗಿದೆ.
Leave a Comment