Puttur : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪುತ್ತಿಲಗೆ ಬಿಗ್ ರಿಲೀಫ್ – ವಿಚಾರಣೆ ಬಳಿಕ ಜಾಮೀನು ಮಂಜೂರುಗೊಳಿಸಿದ ನ್ಯಾಯಾಲಯ
ನ್ಯೂಸ್ ಆ್ಯರೋ : ಪುತ್ತಿಲ ಪರಿವಾರದ ಸಂಸ್ಥಾಪಕ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆ ಪ್ರಕರಣದಲ್ಲಿ ಪುತ್ತಿಲ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್.ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು ಪುತ್ತಿಲ ನಿರಾಳರಾಗಿದ್ದಾರೆ.
ಪ್ರಕರಣದಲ್ಲಿ ಸಂತ್ರಸ್ತೆ ಎನ್ನಲಾದ ಸಾಮೆತ್ತಡ್ಕ ನಿವಾಸಿ 47 ವರ್ಷದ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಅ.ಕ್ರ.45/2024 ರಂತೆ IPC 1860 (U/s-417,354(a), 506 ಸೆಕ್ಷನ್ ನ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಅರುಣ್ ಕುಮಾರ್ ಪುತ್ತಿಲ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ಅರುಣ್ ಕುಮಾರ್ ಪುತ್ತಿಲ ಅವರಿಗೆ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಿರುವ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.
Leave a Comment