ಮೈಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಬ್ರೇಕ್; ಸುಗ್ರೀವಾಜ್ಞೆ ತರಲು ಸಂಪುಟ ಅಸ್ತು
ನ್ಯೂಸ್ ಆ್ಯರೋ: ರಾಜ್ಯದಲ್ಲಿ ಮಿತಿ ಮೀರುತ್ತಿರುವ ಮೈಕ್ರೊ ಫೈನಾನ್ಸ್ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಕೊನೆಗೂ ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದ್ದು, ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಸಚಿವ ಸಂಪುಟದಲ್ಲಿ ಮಸೂದೆಗೆ ಅನುಮೋದನೆ ನೀಡಲಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ತಡೆ ತರುವ ನಿಟ್ಟಿನಲ್ಲಿ ಹೊಸದಾಗಿ ತಂದಿರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.
ಈ ಬಗ್ಗೆ ಸಚಿವ ಸಂಪುಟ ಸಭೆ ನಡೆದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಎಚ್ಕೆ ಪಾಟೀಲ್, ಇಂದು ಸಂಜೆ ನಾಲ್ಕು ಘಂಟೆಗೆ ಹಿರಿಯ ಸಚಿವರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಅಂತಿಮ ತೀರ್ಮಾನವನ್ನು ಮಾಡಲಾಗುತ್ತದೆ. ಅಂತಿಮ ತೀರ್ಮಾನ ಕೈಗೊಳ್ಳುವ ಪರಮಾಧಿಕಾರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಡಲಾಗಿದೆ. ಕೆಲ ತಾಂತ್ರಿಕ ಕಾರಣಗಳಿವೆ, ಹಾಗಾಗಿ ಸಂಜೆ ತೀರ್ಮಾನ ಮಾಡುತ್ತೇವೆ. ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ತಾಂತ್ರಿಕ ದೋಷಗಳ ಬಗ್ಗೆ ಸಿಎಂ ಅಂತಿಮ ತೀರ್ಮಾನ ಮಾಡ್ತಾರೆ ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಕಾನೂನು ಸಚಿವ ಎಚ್ಕೆ ಪಾಟೀಲ್, ಸುಗ್ರೀವಾಜ್ಞೆ ತರಲು ಸಿಎಂಗೆ ಸಚಿವ ಸಂಪುಟ ಅಧಿಕಾರವನ್ನು ನೀಡಿದೆ. ಸಿಎಂ ಜೊತೆ ಸಭೆಯ ಬಳಿಕ ಕಾನೂನಾತ್ಮಕವಾಗಿ ತಿರ್ಮಾನ ಆಗಲಿದೆ. ಸಂಪುಟ ಸಭೆಯಲ್ಲಿ ಸಂಪೂರ್ಣ ಅಧಿಕಾರ ಸಿಎಂ ಅವರಿಗೆ ನೀಡಲಾಗಿದೆ. ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಆಗಲಿವೆ. ಕೆಲವು ಮೈನಸ್ ಆಗಲಿವೆ. ಹೀಗಾಗಿ ಕಾನೂನಾತ್ಮಕ ತೀರ್ಮಾನಕ್ಕೆ ಸಂಜೆ ಹಿರಿಯ ಸಚಿವರ ಸಭೆ ಕರೆಯಲಾಗಿದೆ ಎಂದು ಹೇಳಿದರು.
ಹೀಗಾಗಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಸಚಿವರ ಸಭೆ ನಡೆದ ಬಳಿಕ ಅಂತಿಮವಾದ ತೀರ್ಮಾನ ಹೊರಬರಲಿದೆ.
Leave a Comment