ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ – ಕಲ್ಲಡ್ಕ ಪ್ರಭಾಕರ ಭಟ್ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ

IMG 20240713 WA0104
Spread the love

ನ್ಯೂಸ್ ಆ್ಯರೋ : ಕಳೆದ ವರ್ಷ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದಡಿ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ಕೋರ್ಟ್ ನಲ್ಲಿರುವ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಕಲ್ಲಡ್ಕ ಭಟ್‌ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತು ಆದೇಶಿಸಿದೆ. ಪ್ರಭಾಕರ ಭಟ್ ಪರ ಹೈಕೋರ್ಟ್ ಹಿರಿಯ ವಕೀಲ ಎಂ‌.ಅರುಣ್ ಶ್ಯಾಮ್ ವಾದ ಮಂಡಿಸಿದರು.

ಏನಿದು ಪ್ರಕರಣ?

ಕಳೆದ ವರ್ಷ ಡಿ. 24ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿನ ಸಾರ್ವಜನಿಕ ವೇದಿಕೆಯಲ್ಲಿ ಡಾ.ಪ್ರಭಾಕರ ಭಟ್ ಮಾತನಾಡಿದ್ದರು. ‘ಮುಸ್ಲಿಂ‌ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ದಿನಕ್ಕೊಬ್ಬ ಗಂಡ. ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ’ ಎಂದು ಹೇಳಿದ್ದಾರೆ ಎನ್ನಲಾಗಿತ್ತು.

ಈ ಹೇಳಿಕೆಯು ಮಹಿಳೆಯರ ಖಾಸಗಿತ‌ನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲ ಪ್ರಯೋಗಿಸುವಂತೆ ಪ್ರಚೋದಿಸುತ್ತಿದೆ. ಜೊತೆಗೆ ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯಗಳನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿ ಉಂಟು ಮಾಡಿದ ಅಪರಾಧ’ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಬಿನ್ ನಜೀರ್ ಅಹ್ಮದ್ (27) ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ 2023ರ ಡಿಸೆಂಬರ್ 26ರಂದು ದೂರು ನೀಡಿದ್ದರು.

ಈ ದೂರಿನ ಅನ್ವಯ ಪ್ರಕರಣದ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಶ್ರೀರಂಗಪಟ್ಟಣ ಜೆಎಂಎಫ್‌ಸಿ ಕೋರ್ಟಿಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸದ್ಯ ಈ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

Leave a Comment

Leave a Reply

Your email address will not be published. Required fields are marked *

error: Content is protected !!