ಪಂಜಿನ ಮೆರವಣಿಗೆಯಲ್ಲಿ ಭಾರೀ ಅಗ್ನಿ ಅವಘಡ; 30ಕ್ಕೂ ಹೆಚ್ಚು ಮಂದಿ ಸುಟ್ಟು ಕರಕಲು
ನ್ಯೂಸ್ ಆ್ಯರೋ: ಪಂಜಿನ ಮೆರವಣಿಗೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 30ಕ್ಕೂ ಹೆಚ್ಚು ಮಂದಿ ಸುಟ್ಟು ಗಂಭೀರ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಖಾಂಡ್ವಾದಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, 26/11 ರ ದಾಳಿಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಆಯೋಜಿಸಲಾದ ಪಂಜಿನ ಮೆರವಣಿಗೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಈ ವೇಳೆ ಪಂಜಿಗೆ ಬೆಂಕಿ ಹಚ್ಚುವಾಗ ಏಕಾಏಕಿ ಬೆಂಕಿ ಆವರಿಸಿಕೊಂಡಿದೆ. ಆಗ ಜನರು ಭಯದಿಂದ ಪ್ರಾಣರಕ್ಷಣೆಗಾಗಿ ಓಡಿದಾಗ ಕಾಲ್ತುಳಿತ ಉಂಟಾಗಿದೆ. ಜನರು ವೇಗವಾಗಿ ಓಡುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.
ಖಾಂಡ್ವಾದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ ಜನರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಖಾಂಡ್ವಾ ಎಸ್ಪಿ ಮನೋಜ್ ರೈ ಶ್ರದ್ಧಾಂಜಲಿ ಕಾರ್ಯಕ್ರಮದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಬೆಂಕಿಗೆ ಆಹುತಿಯಾದವರಲ್ಲಿ ಮಹಿಳೆಯರು, ಮಕ್ಕಳು ಕೂಡ ಸೇರಿದ್ದಾರೆ. ಜನರ ಮುಖ, ಕೈ ಸುಟ್ಟು ಕರಕಲಾಗಿದೆ. 30 ಮಂದಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 12 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕಳುಹಿಸಲಾಗಿದೆ. ಉಳಿದವರನ್ನು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮನೆಗೆ ಕಳುಹಿಸಲಾಗಿದೆ.
ಖಾಂಡ್ವಾದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಘಟನೆಯ ವೇಳೆ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಪೊಲೀಸರು ಕೂಡಲೇ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
Leave a Comment