ಎಸ್‌ಸಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು; ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ
ನ್ಯೂಸ್ ಆ್ಯರೋ: ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಮತ್ತು ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ಒಳ ಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲಾಗುವುದು ಎಂದರು.
ಎಸ್‌ಸಿಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ನಂಬಲರ್ಹ ದಾಖಲೆಗಳು ಹಾಗೂ ದತ್ತಾಂಶ ಸಂಗ್ರಹಿಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ನಿರ್ಧಾರ ಮಾಡಲಾಗಿದೆ. ಮೂರು ತಿಂಗಳಲ್ಲಿ ಆಯೋಗ ವರದಿ ನೀಡಲಿದೆ ಎಂದರು.
ಒಳಮೀಸಲಾತಿ ನೀಡುವಂತೆ ರಾಜ್ಯದಲ್ಲಿ ಬೇಡಿಕೆ ಹೆಚ್ಚುತ್ತಿದೆ. ಈ ಬಗ್ಗೆ ಚರ್ಚೆಗಳು ಮತ್ತು ಚಿಂತನೆಗಳು ನಡೆದಿವೆ. ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚೆ ನಡೆದಿದ್ದು, ಒಳ ಮೀಸಲಾತಿ ಕಲ್ಪಿಸಲು ಸಂಪುಟ ಸಭೆ ನಿರ್ಣಯ ಮಾಡಿದೆ ಎಂದು ಎಚ್ ಕೆ ಪಾಟೀಲ್ ತಿಳಿಸಿದರು.
ಆಯೋಗವು ತನ್ನ ವರದಿಯನ್ನು ಸಲ್ಲಿಸುವವರೆಗೆ ಮುಂಬರುವ ಎಲ್ಲಾ ನೇಮಕಾತಿಗಳನ್ನು ಕನಿಷ್ಠ ಮೂರು ತಿಂಗಳ ಕಾಲ ಮುಂದೂಡಲು ಸಂಪುಟ ನಿರ್ಧರಿಸಿದೆ. ಇಂದಿನಿಂದ ಯಾವುದೇ ನೇಮಕಾತಿ ಅಧಿಸೂಚನೆ ಹೊರಡಿಸುವುದಿಲ್ಲ. ಆಯೋಗದ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಾಟೀಲ್ ಮಾಹಿತಿ ನೀಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿ ಒಳಗಡೆಯೇ ಒಳ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಇತ್ತೀಚಿಗೆ ಒಪ್ಪಿಗೆ ನೀಡಿತ್ತು.
Leave a Comment