ಇಂದಿನಿಂದ ಗ್ರಾಮ ಪಂಚಾಯತ್ ಸೇವೆ ಬಂದ್: ಸರ್ಕಾರದ ಧೋರಣೆ ಖಂಡಿಸಿ ನೌಕರರ ಪ್ರತಿಭಟನೆ
ನ್ಯೂಸ್ ಆ್ಯರೋ: ಎಲ್ಲಾ ಸಮಸ್ಯೆಗಳಿಗೂ ಪಂಚಾಯತ್ ಅಧಿಕಾರಿಗಳು ಮತ್ತು ನೌಕರರನ್ನು ನೇರ ಹೊಣೆ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ನೌಕರರು ಅಕ್ಟೋಬರ್ 4ರ ಇಂದಿನಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸೇವೆಗಳನ್ನು ಸಂಪೂರ್ಣ ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಿದ್ದಾರೆ.
ಈ ಹೋರಾಟದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯಿತಿಗಳ ನೌಕರರು, ಅಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ಪಿಡಿಒ ಹುದ್ದೆಗಳನ್ನು ‘ಬಿ’ ಗುಂಪಿನ ಹುದ್ದೆಗಳಾಗಿ ಉನ್ನತೀಕರಿಸುವುದು, ಜ್ಯೇಷ್ಠತಾ ಪಟ್ಟಿ ಅಂತಿಮಗೊಳಿಸುವುದು, ವಿವಿಧ ವೃಂದಗಳ ನೌಕರರಿಗೆ ಸಕಾಲಕ್ಕೆ ಬಡ್ತಿ ನೀಡುವುದು, ಕಾರ್ಮಿಕರ ರಾಜ್ಯ ವಿಮೆ ಮತ್ತು ಭವಿಷ್ಯ ನಿಧಿ ನೀಡುವುದು, ನೇರ ನೇಮಕಾತಿಯಲ್ಲಿ ಆದ್ಯತೆ ನೀಡುವುದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಹುದ್ದೆಗಳಲ್ಲಿ ಪಂಚಾಯತ್ ರಾಜ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳಿಗೆ ಮೀಸಲು ನೀಡಬೇಕೆಂಬ ಬೇಡಿಕೆಗಳನ್ನು ಅಧಿಕಾರಿಗಳು ಮತ್ತು ನೌಕರರು ಮುಂದಿಟ್ಟಿದ್ದಾರೆ.
ಇನ್ನು ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ರಾಜ್ಯ ಪಿಡಿಒ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ರಾಜು ವಾರದ ಅವರು ತಿಳಿಸಿದ್ದಾರೆ.
Leave a Comment