ಹೊಸ ಸರ್ಕಾರಕ್ಕೆ ವೇದಿಕೆ ಸಜ್ಜು; ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ರದ್ದು!
ನ್ಯೂಸ್ ಆ್ಯರೋ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ ಹಿಂಪಡೆಯಲಾಗಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 31, 2019ರ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಮರು ಸಂಘಟನೆ ಕಾಯ್ದೆಯ ಸೆಕ್ಷನ್ 54ರಡಿ ಮುಖ್ಯಮಂತ್ರಿ ನೇಮಕಕ್ಕೂ ಮುನ್ನಾ ತಕ್ಷಣವೇ ಹಿಂತೆಗೆದುಕೊಳ್ಳಲಾಗುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.
ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ ಅಕ್ಟೋಬರ್ 31, 2019 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರ ಪತಿ ಆಳ್ವಿಕೆಯನ್ನು ಹೇರಲಾಗಿತ್ತು.
Leave a Comment