ಪ್ರೊ.ಮುಜಾಫರ್ ಅಸ್ಸಾದಿ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Muzaffar Assadi
Spread the love

ನ್ಯೂಸ್ ಆ್ಯರೋ: ಸಾಮಾಜಿಕ ಚಿಂತಕ, ಹಿರಿಯ ವಿದ್ವಾಂಸ ಪ್ರೊ.ಮುಜಾಫರ್ ಅಸ್ಸಾದಿ ಅವರು ತಡರಾತ್ರಿ 12.45ರ ವೇಳೆಗೆ ನಿಧನರಾಗಿದ್ದಾರೆ. ಹೃದಯ ಸಂಬಂಧಿತ ಕಾಯಿಲೆಗಳಿಗೆ ತುತ್ತಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿಗೆ ಇತ್ತೀಚೆಗೆ ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಬಹು ಅಂಗಾಂಗ ವೈಫಲ್ಯದ ಕಾರಣದಿಂದ ಕೊನೆಯುಸಿರೆಳೆದಿದ್ದಾರೆ. ಅಸ್ಸಾದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜಿಕ ಜಾಲತಾಣದಲ್ಲಿ ಮುಜಾಫರ್ ಅಸ್ಸಾದಿ ಅವರೊಂದಿಗಿನ ಒಡನಾಟದ ಬಗ್ಗೆ ಹಂಚಿಕೊಂಡಿದ್ದಾರೆ. ‘‘ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ’ಎಂದಿದ್ದಾರೆ.

‘ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ, ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ’ ಹೇಳಿದ್ದಾರೆ.

‘ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್‌ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದ ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ’ ಎಂದು ಅವರ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ.

‘ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ.ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ’ ಎಂದು ಹೇಳಿದ್ದಾರೆ. ‘ಪ್ರೊ.ಅಸ್ಸಾದಿ ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ತಿಳಿದ್ದಾರೆ.

ಇನ್ನು ಮೈಸೂರಿನ ಸರಸ್ವತಿಪುರಂ ಫೈರ್ ಬ್ರಿಗೇಡ್ ಬಳಿ ಇರುವ ನ್ಯೂ ಮುಸ್ಲಿಂ ಹಾಸ್ಟೆಲ್‌ನಲ್ಲಿ ಸಾರ್ವಜನಿಕರ ಅಂತಿಮದರ್ಶನಕ್ಕೆ ಮೃತದೇಹವನ್ನು ಇರಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಶಿರ್ವ ಎಂಬ ಊರಿನಲ್ಲಿ ಮುಸ್ಲಿಮ್ ಕುಟುಂಬದಲ್ಲಿ ಜನಿಸಿದ ಅಸ್ಸಾದಿಯವರು ಮಂಗಳೂರು, ಗೋವಾ ಮತ್ತು ಮೈಸೂರು ವಿಶ್ವವಿದ್ಯಾನಿಲಯಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಸಮಾಜಮುಖಿ ಚಿಂತಕರಾಗಿದ್ದರು. ವಿಶಿಷ್ಟ ರಾಜಕೀಯ ಒಳನೋಟಗಳನ್ನು ನೀಡುತ್ತಿದ್ದ ಬರಹಗಾರರಾಗಿದ್ದರು.

Leave a Comment

Leave a Reply

Your email address will not be published. Required fields are marked *

error: Content is protected !!