
ಈ ಬಾರಿಯ ದೀಪಾವಳಿ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ – ಹಸಿರು ಪಟಾಕಿ ಬಳಸಲು ಮಾತ್ರ ಅವಕಾಶ : ಏನೇನಿದೆ ರೂಲ್ಸ್?
- ಧಾರ್ಮಿಕ
- November 3, 2023
- No Comment
- 70
ನ್ಯೂಸ್ ಆ್ಯರೋ : ಈ ಬಾರಿಯ ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಇದೀಗ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದಲ್ಲದೆ ಕೆಲವು ನಿಯಮಗಳನ್ನು ತಪ್ಪದೇ ಪಾಲಿಸಬೇಕೆಂದು ಸೂಚಿಸಿದೆ.
ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುವುದನ್ನು ತಡೆಗಟ್ಟಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಳಕಂಡ ಮಾರ್ಗಸೂಚಿಗಳನ್ನು ಹೊರಡಿಸಿರುತ್ತದೆ.
ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಶಬ್ದ ಮತ್ತು ವಾಯು ಮಾಲಿನ್ಯ ನಿಯಂತ್ರಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ: 728/1998 ರ ಆದೇಶದನ್ವಯ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳು ಈ ಕೆಳಕಂಡ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಸೂಚಿಸಿದೆ.
- ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಜಿಲ್ಲಾಧಿಕಾರಿಗಳು, ಪೋಲೀಸ್ ವರಿಷ್ಠಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಅಧೀನ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಆದೇಶ ಪಾಲನೆಗೆ ಸೂಕ್ತ ಕ್ರಮ ಜರುಗಿಸುವುದು.
- ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ಪಡೆ ಅಧಿಕಾರಿ, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರುಗಳು, ಆರೋಗ್ಯಧಿಕಾರಿಗಳು, ತಹಶೀಲ್ದಾರರು, ಜಿಲ್ಲಾ ಪರಿಸರ ಅಧಿಕಾರಿಗಳು, ಪೋಲೀಸ್ ಅಧಿಕಾರಿಗಳು, ಆಸಕ್ತ ನಾಗರೀಕರು ಹಾಗು ಸ್ಥಳೀಯ ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆಗಳನ್ನು ರಚಿಸುವಂತೆ ಸೂಚನೆ ನೀಡಲಾಗಿದೆ.
ಅದಲ್ಲದೆ ಪಟಾಕಿ ಗೋದಾಮುಗಳಿಗೆ ಭೇಟಿ ನೀಡಿ, ಪರಿಶೀಲನೆಗೆ ಸೂಚಿಸಲಾಗಿದ್ದು, ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಬೇಕು.
- ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗು ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿನ್ನೆಯಿರುತ್ತದೆ ಹಾಗು ಕ್ಯೂಆರ್ ಕೋಡ್ ಸಹಾ ಇರುತ್ತದೆ, ಸದರಿ ಚಿಹ್ನೆಯ ಬಗ್ಗೆ ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳುವುದು, ಸದರಿ ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ. ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.
- ಯಾವುದೇ ಹಸಿರು ಪಟಾಕಿಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು ಮತ್ತು ನಿಗದಿತ ಗುಣಮಾಪನಗಳಿಗೆ ಸರಿಹೊಂದಿದ್ದಲ್ಲಿ, ಅವುಗಳನ್ನು ಸಹಾ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು.
5) ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗು ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.
6). ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳ ಕುರಿತಂತೆ ಸಾರ್ವಜನಿಕರಿಗೆ ಮತ್ತು ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಾಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಯೋಗದೊಂದಿಗೆ ಹಮ್ಮಿಕೊಳ್ಳುವುದು.
7).ಯಾವುದೇ ಸ್ಥಳೀಯ ಆಸ್ಪತ್ರೆ ಹಾಗು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗು ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಫೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ. ಇದನ್ನು ಎಲ್ಲಾ ಸ್ಥಳೀಯ ಸಂಸ್ಥೆ ಹಾಗು ಪೊಲೀಸ್ ಇಲಾಖೆಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು.
8.) ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾಲ್‌ಗಳಲ್ಲಿ ಕರಪತಭಿತ್ತಿಪತ್ರಗಳನ್ನು ಹಂಚುವ ಮೂಲಕ, ವಿಡಿಯೋ ಮತ್ತು ಆಡಿಯೋ ಮುಖಾಂತರ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸುವುದು.
9.) ಸ್ಥಳೀಯ ಟಿ.ವಿ. ಹಾಗೂ ರೇಡಿಯೋ ಮುಖಾಂತರ ಸಾರ್ವಜನಿಕರಿಗೆ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸುವ ಬಗ್ಗೆ ಜಾಗೃತಿ ಮೂಡಿಸುವುದು.
10).ದೀಪಾವಳಿಯ ಸಮಯದಲ್ಲಿ ಉತ್ಪಾದನೆಯಾಗುವಂತಹ ತ್ಯಾಜ್ಯ ವಸ್ತುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮವಹಿಸುವುದು.
11).ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಣೆ ಮಾಡುವಂತಿಲ್ಲ. ಒಂದು ವೇಳೆ ಮಾಡಿದರೆ ನಿಷೇಧಿತ ಪಟಾಕಿಗಳು ಹಾಗು ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕುವಂತೆ ಸೂಚಿಸಲಾಗಿದೆ.