ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ
ನ್ಯೂಸ್ ಆ್ಯರೋ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಪಕ್ಷುಬ್ದ ವಾತಾವರಣ ಕಾಣಿಸಿಕೊಳ್ಳುತ್ತಿದೆ. ಇದರ ಪರಿಣಾಮ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹವಾಮಾನ ವೈಪರೀತ್ಯದಿಂದ ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡು ಕರಾವಳಿಯ ಕಡೆಯಲ್ಲಿ ಇದರ ಪರಿಣಾಮ ಗೋಚರವಾಗಲಿದ್ದು, ಈ ಹಿನ್ನೆಲೆ ಒಡಿಶಾ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಬಿಹಾರ ಮತ್ತು ಜಾರ್ಖಂಡ್‌ನ ಮೇಲೂ ಮಳೆ ಪರಿಣಾಮ ಬೀರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಸ್ಕೈಮೆಟ್ ಹವಾಮಾನ ವರದಿಯ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಆಂಧ್ರಪ್ರದೇಶ ಮತ್ತು ಒಡಿಶಾ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಇನ್ನು, ರಾಯಲಸೀಮಾ, ಉತ್ತರ ತಮಿಳುನಾಡು ಮತ್ತು ದಕ್ಷಿಣ ಛತ್ತೀಸ್‌ಗಢದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ದಕ್ಷಿಣ ಛತ್ತೀಸ್‌ಗಢ, ಪೂರ್ವ ತೆಲಂಗಾಣ ಮತ್ತು ಪಶ್ಚಿಮ ಬಂಗಾಳದ ಗಂಗಾ ಬಯಲು ಪ್ರದೇಶಗಳಲ್ಲಿಯೂ ಲಘು ಮಳೆಯಾಗುವ ಸಾಧ್ಯತೆಯಿದೆ. 2024 ಕೊನೆಯ ಪ್ರಬಲ ಹವಾಮಾನ ವ್ಯವಸ್ಥೆಯಾಗಿರಬಹುದು ಎಂದು ಹೇಳಲಾಗುತ್ತಿದೆ.
ಹವಾಮಾನ ಇಲಾಖೆ ಪ್ರಕಾರ ಶುಕ್ರವಾರ ಉತ್ತರ ತಮಿಳುನಾಡು, ಪುದುಚೇರಿ ಮತ್ತು ರಾಯಲಸೀಮಾದಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶುಕ್ರವಾರ ಮತ್ತು ಶನಿವಾರದಂದು ಕರಾವಳಿ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಡಿಸೆಂಬರ್ 21 ರಿಂದ 23 ರ ಅವಧಿಯಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಸಾಧಾರಣ ಮಳೆ, ಡಿಸೆಂಬರ್ 20 ರಿಂದ 24 ರ ಅವಧಿಯಲ್ಲಿ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Leave a Comment