ಇಂದಿನಿಂದ ಗಾಳಿ ಸಹಿತ ಧಾರಾಕಾರ ಮಳೆ; ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ನ್ಯೂಸ್ ಆ್ಯರೋ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇಲ್ಮೈ ಸೈಕ್ಲೋನಿಕ್ ಪರಿಚಲನೆ ಕಂಡು ಬಂದಿದ್ದು, ಇದರ ಪರಿಣಾಮವಾಗಿ ಇಂದಿನಿಂದ ಮೂರು ದಿನಗಳ ಕಾಲ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆಂಧ್ರ, ತಮಿಳುನಾಡಿನ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಐಎಂಡಿ ಎಚ್ಚರಿಕೆ ನೀಡಿದೆ.
ವಿಶೇಷವಾಗಿ ಭಾರತೀಯ ಹವಾಮಾನ ಇಲಾಖೆ (IMD) ಚೆನ್ನೈಗೆ ಯೆಲ್ಲೋ ಅಲರ್ಟ್ ನೀಡಿದ್ದು, ನಗರದ ಕೆಲವೆಡೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಮಂಡಲದ ಪರಿಚಲನೆ ಉಂಟಾಗಲಿದ್ದು, ಇದರ ಬೆನ್ನಲ್ಲೇ ಡಿಸೆಂಬರ್ 16ರವರೆಗೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣಗೊಂಡು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ತಮಿಳುನಾಡು ಕರಾವಳಿಯತ್ತ ಚಲಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 16, 17 ಮತ್ತು 18 ರಂದು ತಮಿಳುನಾಡು ಮತ್ತು ಪುದುಚೇರಿಯ ಕೆಲವು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 19ರಂದು ಕಡಲೂರು, ಮೈಲಾಡುತುರೈ, ಕಾರೈಕಲ್, ತಂಜಾವೂರು, ತಿರುವಾರೂರ್, ನಾಗಪಟ್ಟಿಣಂ, ವಿಲ್ಲುಪುರಂ, ಅರಿಯಲೂರ್ , ಪೆರಂಬಲೂರ್, ಕಲ್ಲಕುರಿಚಿ, ಪುದುಕೊಟ್ಟೈ, ತಿರುಚ್ಚಿ, ಚೆಂಗಲ್ಪಟ್ಟು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 24ರಿಂದ 48 ಗಂಟೆಗಳಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 17 ಮತ್ತು 18 ರಂದು ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 18 ಮತ್ತು 19 ರಂದು ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶದ ರಾಯಲ್ ಬಾರ್ಡರ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
Leave a Comment